ಪೊಲೀಸ್ ಆಡಳಿತವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊಸ ಪೊಲೀಸ್ ಉಪವಿಭಾಗವನ್ನು ರಚಿಸಿದೆ ಎಂದು ಧಾರವಾಡ ಎಸ್ಪಿ ಗುಂಜನ್ ಆರ್ಯ ತಿಳಿಸಿದ್ದಾರೆ.ಢ
ಹುಬ್ಬಳ್ಳಿ:ಧಾರವಾಡ ಜಿಲ್ಲೆಯಲ್ಲಿ ಪೊಲೀಸ್ ಆಡಳಿತವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊಸ ಪೊಲೀಸ್ ಉಪವಿಭಾಗವನ್ನು ರಚಿಸಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದರು.
ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿ ಅವರು, ಸರ್ಕಾರದ ಆದೇಶದಂತೆ ಹುಬ್ಬಳ್ಳಿ ಗ್ರಾಮೀಣ ಉಪವಿಭಾಗದ ಪೊಲೀಸ್ ಉಪ ಅಧೀಕ್ಷಕರಾಗಿ ಶಿವಾನಂದ ಕಟಗಿ ಅವರನ್ನು ನೇಮಕ ಮಾಡಲಾಗಿದೆ. ಹೊಸ ವ್ಯವಸ್ಥೆಯಲ್ಲಿ ನವಲಗುಂದ, ಕುಂದಗೋಳ ಹಾಗೂ ಗುಡಗೇರಿ ಸೇರಿದಂತೆ ಕೆಲವು ಪೊಲೀಸ್ ಠಾಣೆಗಳು ಹುಬ್ಬಳ್ಳಿ ಗ್ರಾಮೀಣ ಉಪವಿಭಾಗದ ವ್ಯಾಪ್ತಿಗೆ ಬರಲಿವೆ. ಇದರಿಂದ ಪೊಲೀಸ್ ಆಡಳಿತ ಮತ್ತು ಕಾನೂನು ಸುವ್ಯವಸ್ಥೆ ಮೇಲ್ವಿಚಾರಣೆ ಇನ್ನಷ್ಟು ಸುಗಮವಾಗಲಿದೆ ಎಂದು ಹೇಳಿದರು.
ಎಸ್ಪಿ ಗುಂಜನ್ ಆರ್ಯ ಢ
ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗುತ್ತಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಹಾಗೂ ಎರಡು ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗುವುದು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಹಬ್ಬಗಳ ಸಂದರ್ಭದಲ್ಲಿ ಡಿಜೆ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಯೋಜಕರು ಸಿಂಗಲ್ ವಿಂಡೋ ವ್ಯವಸ್ಥೆಯ ಮೂಲಕ ಅಗತ್ಯ ಅನುಮತಿಗಳನ್ನು ಪಡೆದುಕೊಳ್ಳಬೇಕು. ನಿಯಮ ಉಲ್ಲಂಘಿಸಿ ಎಲ್ಲಿಯೇ ಅಕ್ರಮವಾಗಿ ಡಿಜೆ ಬಳಸಿದರೂ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಮಟ್ಕಾ, ಗಾಂಜಾ ಹಾಗೂ ಅಕ್ರಮ ಚಟುವಟಿಕೆಗಳ ವಿರುದ್ಧ ಪ್ರತಿ ವಾರ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ ಎಂದರು.
ಇದೇ ವೇಳೆ, ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಗರಗ ಪೊಲೀಸ್ ಠಾಣೆಯಲ್ಲಿ 70 ವರ್ಷದ ಬಸವಂತಪ್ಪ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಸ್ಪಿ ಗುಂಜನ ಆರ್ಯ ತಿಳಿಸಿದರು.
ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕರು ಶಾಂತಿ ಹಾಗೂ ಸೌಹಾರ್ದತೆ ಕಾಪಾಡಿಕೊಂಡು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

